(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.29. ಪೊಲೀಸ್ ಸಿಬ್ಬಂದಿಯ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮಾಡಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯ ಪೊಲೀಸ್ ಸಿಬ್ಬಂದಿ ಕುಮಾರ್ ಹನಮಂತಪ್ಪ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ ಊಟ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬಾರ್ ಒಂದರ ಮುಂಭಾಗದಲ್ಲಿ ನಿಂತುಕೊಂಡಿದ್ದ ಆರೋಪಿಗಳು ಕುಮಾರ್ ಕುಟುಂಬವನ್ನು ಹಿಂಬಾಲಿಸಿದ್ದಾರೆ. ಬಳಿಕ ಕುಮಾರ್ ಪತ್ನಿ ಮತ್ತು ನಾದಿನಿಯನ್ನು ವಸತಿಗೃಹದ ಬಳಿ ಬಿಟ್ಟು ಕರ್ತವ್ಯಕ್ಕೆ ಹಿಂತಿರುಗುತ್ತಿದ್ದಂತೆ ಬೈಕ್ ನಲ್ಲಿ ಬಂದ ಆರೋಪಿಗಳು ಅಡ್ಡಗಟ್ಟಿದ್ದಾರೆ ಎಂದು ತಿಳಿದುಬಂದಿದೆ.