(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 15. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಮುಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಹಚ್ಚಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ಲಾವತಡ್ಕ ಎಂಬಲ್ಲಿ ನಡೆದಿದೆ.
ವಿವಿಧ ಜಾತಿಯ ಮರಗಳನ್ನು ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ತಪಾಸಣೆ ವೇಳೆ ಲಾರಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಶಾಹುಲ್ ಹಮೀದ್ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ ಕೆ.ಕೆ. ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ, ಅರಣ್ಯ ಪಾಲಕ ನಿಂಗಪ್ಪ ಅವಾರಿ ಮತ್ತು ಸುನಿಲ್ ನಾಯ್ಕ ಭಾಗವಹಿಸಿದ್ದರು.