ಪಿಲಿಕುಳ ಕಂಬಳ – ಸಕಲ ಸಿದ್ಧತೆಗೆ ಸೂಚನೆ

(ನ್ಯೂಸ್ ಕಡಬ) newskadaba.com ನ. 05. ಇದೇ ಬರುವ ನವೆಂಬರ್ 17 ಮತ್ತು 18ರಂದು ಪಿಲಿಕುಳದಲ್ಲಿ ಕಂಬಳ ನಡೆಯಲಿರುವ  ಹಿನ್ನೆಲೆಯಲ್ಲಿ ಸೋಮವಾರದಂದು ಕಂಬಳ ಕೆರೆಯಲ್ಲಿ ಸಿದ್ಧತೆಗಳ ಪರಿಶೀಲನೆ ನಡೆಯಿತು. ಶಾಸಕರಾದ ಉಮಾನಾಥ ಕೋಟ್ಯಾನ್, ಮಂಜುನಾಥ ಭಂಡಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ನೇತೃತ್ವದಲ್ಲಿ ಪಿಲಿಕುಲ ಕಂಬಳ ಕೆರೆಗೆ ಭೇಟಿ ನೀಡಿ ಕೈಗೊಳ್ಳಬೇಕಾದ ಸೌಲಭ್ಯಗಳು ಮತ್ತು ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಕಂಬಳದ ಕೆರೆ ಪುನರ್‍ ನವೀಕರಣ ಈಗಾಗಲೇ ಬಹುತೇಕ ಅಂತಿಮಗೊಂಡಿದೆ. ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ ಬೇಕಾದ ಸೌಲಭ್ಯಗಳು, ಕಂಬಳ ವೀಕ್ಷಿಸಲು ಆಗಮಿಸುವ ಸಾರ್ವಜನಿಕರಿಗೆ ಬೇಕಾದ ಅಗತ್ಯ ಮೂಲ ಸೌಲಭ್ಯಗಳನ್ನು ನಿರ್ಮಿಸುವ ಬಗ್ಗೆ ಈ ಸಂದರ್ಭದಲ್ಲಿ ಪರಿಶೀಲಿಸಲಾಯಿತು.

ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರದ ಆಯುಕ್ತರು ಕಂಬಳ ಸಿದ್ಧತೆಗಳ ಮೇಲ್ವಿಚಾರಣೆ ವಹಿಸಬೇಕು, ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಕಲ್ಪಿಸಬೇಕು, ವಿದ್ಯುತ್, ಶೌಚಾಲಯ ಮತ್ತಿತರ ವ್ಯವಸ್ಥೆಗಳನ್ನು ಪಿಲಿಕುಳ ಪ್ರಾಧಿಕಾರವು ಒದಗಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ಕಂಬಳದ ಹಿನ್ನೆಲೆಯಲ್ಲಿ ಪ್ರವೇಶದ್ವಾರ ನಿರ್ಮಾಣ, ಗುತ್ತು ಮನೆಯ ವಿದ್ಯುತ್‍ ಅಲಂಕಾರ ಮತ್ತಿತರ ವ್ಯವಸ್ಥೆಗಳನ್ನು ಮಾಡಬೇಕು. ಜನಸಂದಣಿಯನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ತಿಳಿಸಿದರು. ಈ ಕಂಬಳ ಕೂಟದಲ್ಲಿ ಸುಮಾರು 150ಕ್ಕೂ ಹೆಚ್ಚು ಅಧಿಕ ಜೋಡಿ ಕೋಣಗಳು ಭಾಗವಹಿಸಲಿದ್ದು ಸುಮಾರು 25 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Also Read  ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ರಶ್ಮಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ನವೀನ್ ಚಂದ್ರ ಆಳ್ವ, ಪ್ರಶಾಂತ್ ಕಾಜವ ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top