(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕ್ಯಾ. ಚೌಟ ಅವರು, ತುರ್ತು ಸ್ಪಂದನೆ ಕೋರಿ ಕೇಂದ್ರ ಸರ್ಕಾರಕ್ಕೆ ಸುದೀರ್ಘ ಪತ್ರ ಬರೆದಿದ್ದಾರೆ. ಜತೆಗೆ, ದಕ್ಷಿಣ ಕನ್ನಡದಲ್ಲಿ ಕಾಫಿ ಬೆಳೆಗೆ ಪೂರಕ ವಾತವಾರಣವಿದ್ದು, ಕಾಫಿ ಬೆಳೆಯನ್ನು ಸಾಂಪ್ರದಾಯಿಕ ಬೆಳೆಯಾಗಿ ಪ್ರೋತ್ಸಾಹಿಸುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಾಫಿ ಬೋರ್ಡ್ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಕ್ಯಾ. ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪಿಯುಷ್ ಗೊಯೆಲ್ ಅವರಿಗೂ ಪ್ರತ್ಯೇಕ ಪತ್ರ ಬರೆದಿದ್ದಾರೆ.