ಡಿ.14ರಂದು ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ನ. 09. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು.

ಲೋಕ ಅದಾಲತ್‍ನಲ್ಲಿ ರಾಜೀ ಸಂಧಾನದ ಮುಖಾಂತರ ಇತ್ಯರ್ಥಪಡಿಸಿಕೊಳ್ಳ ಬಹುದಾದ ಪ್ರಕರಣಗಳು:-

ಮೋಟಾರು ವಾಹನ ಅಪಘಾತ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಚೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ಭೂಸ್ವಾಧೀನ ಹಾಗೂ ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿಎಲ್ ಹಾಗೂ ಕ್ರಿಮಿನಲ್ ಪ್ರಕರಣಗಳು.

Also Read  ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ

ಲೋಕ ಅದಾಲತ್‍ನಲ್ಲಿ ನ್ಯಾಯಾಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜಿ ಮಾಡಕೊಳ್ಳಲು ಸೂಕ್ತ ಮಾರ್ಗದರ್ಶನವನ್ನು ನೀಡಲಾಗುತ್ತದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಲೋಕ ಅದಾಲತ್ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ. ಸಾರ್ವಜನಿಕರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿ (ದೂರವಾಣಿ ಸಂಖ್ಯೆ 0824-2448111) ಸಂಪರ್ಕಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ಅವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top