(ನ್ಯೂಸ್ ಕಡಬ) newskadaba.com ಬೆಂಗಳೂರು, ನ.21. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಬಿಪಿಎಲ್ ಪಡಿತರ ಚೀಟಿಯನ್ನೂ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿ ಮಾಡುವ ರಾಜ್ಯ ಸರ್ಕಾರದ ಅಭಿಯಾನಕ್ಕೆ ಭಾರೀ ಜನಾಕ್ರೋಶ ಮತ್ತು ಈ ಅಭಿಯಾನದ ವಿರುದ್ಧ ಬಿಜೆಪಿ ನಾಯಕರು ಸರಣಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸೂಚನೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರರಿಗೆ ಬಿಪಿಎಲ್ ಕಾರ್ಡ್ ನೀಡಿದ್ದರೆ ಅದನ್ನು ರದ್ದುಪಡಿಸಿ ಎಪಿಎಲ್ಗೆ ಪರಿವರ್ತಿಸಬೇಕು. ಇವರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸು ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.