(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 07. ಬಳ್ಳಾರಿಯ ಜಿಲ್ಲಾ ಆಸ್ಪತ್ರೆ(ಬಿಮ್ಸ್)ಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಮರಣ ಪ್ರಕರಣಗಳ ಸಂಬಂಧ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ ಸಂಬಂಧ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿ.ಕೆ.ರಾಮಮೂರ್ತಿ ಮತ್ತು ಎಂಎಲ್ಸಿ ರವಿಕುಮಾರ್ ಒಳಗೊಂಡ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿತ್ತು.