(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 09. ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.
ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಗಳನ್ನು ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಘಾಂವಿ ಜನತೆಗೆ ಧನ್ಯವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ ರಾಜ್ಯದ್ಲೂ ಜನರಿಗೆ 10 ಕೆಜಿ ಅಕ್ಕಿ ಕೊಡುತ್ತಿಲ್ಲ. ಯಾವುದಾದರೂ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದನ್ನು ಬಿಜೆಪಿಗರು ತೋರಿಸಿದ್ದೇ ಆದರೆ, ಈಗಲೇ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಯಡಿಯೂರಪ್ಪ, ಬೊಮ್ಮಾಯಿಯವರೇ, ನಾನು ಕೊಟ್ಟಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದು ಯಾರಪ್ಪಾ? ಬಿಜೆಪಿಗೆ ಬಡವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯೂ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ 10 ಕೆಜಿ ನೀಡಲಾಗುತ್ತಿದೆ. ರೂ.34 ಕೊಡುತ್ತೇವೆ ಅಕ್ಕಿ ಕೊಡಿ ಎಂದರೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಹೀಗಾಗಿ 5 ಕೆಜಿ ಬದಲಾಗಿ ಹಣ ಕೊಡುತ್ತಿದ್ದೇವೆ. ನಾವು ಯಾವುದೇ ಕಾರಣಕ್ಕೂ ಒಂದು ಕೆಜಿ ಅಕ್ಕಿಯನ್ನೂ ಕಡಿಮೆ ಮಾಡಲ್ಲ. ಎಷ್ಟೇ ಹಣ ಖರ್ಚಾದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದರು.