(ನ್ಯೂಸ್ ಕಡಬ) newskadaba.com ಡಿ. 11. ಬೆಂಗಳೂರು: ಫೆಂಗಲ್ ಚಂಡಮಾರುತ ಪ್ರಭಾವವು ಕಡಿಮೆಯಾದ ಬಳಿಕ ರಾಜ್ಯದಲ್ಲಿ ಇಳಿಮುಖವಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ-ವಾಯುವ್ಯದ ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇಂದು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಇರುವ ಸಾಧ್ಯತೆಯಿದೆ.