(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಇರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರತದ ಹವಾಮಾನ ಇಲಾಖೆಯು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತದೊಂದಿಗೆ ಮಳೆಯ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ ರೂಪುಗೊಂಡಿರುವ ಸಾಧಾರಣ ಚಂಡಮಾರುತದವೊಂದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ತಮಿಳುನಾಡು ಕಡೆಗೆ ಚಲಿಸುವುದನ್ನು ಮುಂದುವರೆಸುತ್ತದೆ ಮತ್ತು ಮುಂದಿನ 12 ಗಂಟೆಗಳಲ್ಲಿ ಕ್ರಮೇಣ ದುರ್ಬಲಗೊಳ್ಳುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಡಿಸೆಂಬರ್ 12 ರಿಂದ 18 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.










