(ನ್ಯೂಸ್ ಕಡಬ) newskadaba.com ಡಿ. 25 ಹಾವೇರಿ: ರಾಜ್ಯದಲ್ಲಿ ಬುಧವಾರ ಮಧ್ಯಾಹ್ನ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಧಾರುಣ ಘಟನೆ ಶಿಗ್ಗಾಂವಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌ಯುವಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ತಿಮ್ಮಾಪುರ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಉಸಿರುಚೆಲ್ಲಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮೃತರನ್ನು ಬೆಂಗಳೂರಿನ ಚಾಮರಾಜಪೇಟೆಯ 59 ವರ್ಷದ ಚಂದ್ರಮ್ಮ, ಅವರ ಮಗಳು ಮೀನಾ (38), ಕಾರು ಚಾಲಕ ಮಹೇಶ್ ಕುಮಾರ್ ಸಿ (41) ಹಾಗೂ ಧನ್ವೀರ್ (11) ಎಂದು ಗುರುತಿಸಲಾಗಿದೆ.